ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಅಡ್ವಾಣಿ, ಜೋಷಿ ವಿರುದ್ಧ ಆರೋಪದ ಕುರಿತ ಸುಪ್ರೀಂ ವಿಚಾರಣೆ ಮುಂದೂಡಿಕೆ

0
255

ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪಕ್ಷದ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ, ಮುರಳಿ ಮನೋಹರ್ ಜೋಷಿ ಸೇರಿದಂತೆ ವಿವಿಧ ಮುಖಂಡರ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದ  ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಗುರುವಾರಕ್ಕೆ ಮುಂದೂಡಿದೆ. ಬಿಜೆಪಿ ಮುಖಂಡರಾದ ಎಲ್ ಕೆ ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಉಮಾ ಭಾರತಿ ಸೇರಿದಂತೆ 13 ಮುಖಂಡರ ವಿರುದ್ಧದ ಆರೋಪಗಳನ್ನು ಕೈ ಬಿಟ್ಟ ವಿಚರಣಾಧೀನ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ  ಅಧಿಕಾರಿಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಇದೀಗ ಈ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಾಳೆ ಮುಂದೂಡಿದೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಆರ್ ಎಸ್ ನಾರಿಮನ್ ನೇತೃತ್ವದ ಪೀಠ ಇಂದು ಪ್ರಕರಣದ  ವಿಚಾರಣೆ ನಡೆಸಿ 13 ಮಂದಿ ಮುಖಂಡರ ವಿರುದ್ಧ ಆರೋಪಗಳನ್ನು ಕೈಬಿಟ್ಟ ವಿಚಾರ ತಮ್ಮ ವ್ಯಾಪ್ತಿಗೆ ಬರುವುದಿಲ್ಲ. ಆದರೂ ಪ್ರಕರಣದ ವಿಚಾರಣೆಯನ್ನು ನಾಳೆ ನಡೆಸುವುದಾಗಿ ಪೀಠ ಹೇಳಿದೆ. ನಿನ್ನೆಯಷ್ಟೇ ಇದೇ ಸುಪ್ರೀಂ ಕೋರ್ಟ್ ರಾಮಮಂದಿರ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಜೆಎಸ್ ಖೆಹರ್ ನೇತೃತ್ವದ ಪೀಠ,  ನ್ಯಾಯಾಲಯದ ಹೊರಗೆ ಸಂಧಾನದ ಮೂಲಕ ಪ್ರಕರಣ  ಇತ್ಯರ್ಥ ಪಡಿಸಿಕೊಳ್ಳುವಂತೆ ಹೇಳಿತ್ತು. ಇದಾದ ಬೆನ್ನಲ್ಲೇ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ನಡೆಯುತ್ತಿದೆ.

ಇನ್ನು ಈ ಹಿಂದೆ ಅಂದರೆ ಮಾರ್ಚ್ 6ರಂದು ನಡೆದಿದ್ದ ವಿಚಾರಣೆ ವೇಳೆ ಅಡ್ವಾಣಿ, ಮುರಳಿ ಮನೋಹರ್ ಜೋಷಿ ಹಾಗೂ ಕೇಂದ್ರ ಸಚಿವೆ ಉಮಾಭಾರತಿ ಸೇರಿದಂತೆ ಬಿಜೆಪಿ ಪ್ರಮುಖ ಮುಖಂಡರ ವಿರುದ್ಧದ ಆರೋಪಗಳನ್ನು  ಕೈ  ಬಿಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ದೇಶಾದ್ಯಂತ ತೀವ್ರ ಹಿಂಸಾಚಾರ ಮತ್ತು ಕೋಮುಗಲಭೆಗೆ ಕಾರಣವಾಗಿದ್ದ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಿಜೆಪಿ ಮುಖಂಡರಾದ ಎಲ್ ಕೆ ಅಡ್ವಾಣಿ, ಆರ್ ಎಸ್ ಎಸ್  ಮುಖಂಡ ಮುರಳಿ ಮನೋಹರ್ ಜೋಷಿ, ಕೇಂದ್ರ ಸಚಿವೆ ಉಮಾಭಾರತಿ ಅವರ ವಿರುದ್ಧದ ಷಡ್ಯಂತ್ರ ಆರೋಪವನ್ನು ತಾಂತ್ರಿಕ ಕಾರಣಗಳಿಂದಾಗಿ ಕೈಬಿಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಅಲ್ಲದೆ ಪ್ರಕರಣದ  ವಿಚಾರಣೆ ವಿಳಂಬವಾಗುತ್ತಿರುವುದಕ್ಕೂ ನ್ಯಾಯಾಲಯ ತನ್ನ ಅಸಮಾಧಾನ ವ್ಯಕ್ತಪಡಿಸಿತ್ತು.

 Click this button or press Ctrl+G to toggle between Kannada and English